ನವದೆಹಲಿ:
ಅಸ್ತಿತ್ವದಲ್ಲಿದ್ದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ಎಂಜಿಎನ್‌ಆರ್‌ಇಜಿಎ)ಗೆ ಬದಲಾಗಿ ತರಲಾಗಿರುವ ವಿಕಸಿತ ಭಾರತ – ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್ (ಗ್ರಾಮೀಣ) (ವಿ.ಬಿ–ಜಿ ರಾಮ್ ಜಿ) ಮಸೂದೆ, 2025 ಅನ್ನು ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ ಲೋಕಸಭೆ ಅಂಗೀಕರಿಸಿದೆ. ಯೋಜನೆಯಿಂದ ಮಹಾತ್ಮ ಗಾಂಧಿ ಹೆಸರನ್ನು ಕೈಬಿಟ್ಟಿರುವುದನ್ನು ವಿರೋಧಿಸಿ ಪ್ರತಿಪಕ್ಷ ಸದಸ್ಯರು ಸದನದಲ್ಲಿ ಮಸೂದೆ ಪ್ರತಿಯನ್ನು ಹರಿದು ಹಾಕಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಈ ಮಸೂದೆಯನ್ನು ಮಂಗಳವಾರ ಕೇಂದ್ರದ ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಲೋಕಸಭೆಯಲ್ಲಿ ಮಂಡಿಸಿದ್ದರು. 20 ವರ್ಷಗಳಷ್ಟು ಹಳೆಯದಾದ ಎಂಜಿಎನ್‌ಆರ್‌ಇಜಿಎ ಯೋಜನೆಗೆ ಪರ್ಯಾಯವಾಗಿ ರೂಪಿಸಲಾಗಿರುವ ಈ ಹೊಸ ಯೋಜನೆಯ ಮೂಲಕ, ಗ್ರಾಮೀಣ ಪ್ರದೇಶಗಳಲ್ಲಿ ಪ್ರತಿವರ್ಷ 125 ದಿನಗಳವರೆಗೆ ಉದ್ಯೋಗ ಖಾತರಿಯನ್ನು ಒದಗಿಸುವ ಉದ್ದೇಶವನ್ನು ಸರ್ಕಾರ ಮುಂದಿಟ್ಟಿದೆ.
ಗುರುವಾರ ಮಸೂದೆ ಮೇಲಿನ ಚರ್ಚೆಗೆ ಉತ್ತರಿಸಿದ ಶಿವರಾಜ್ ಸಿಂಗ್ ಚೌಹಾಣ್, ಹೊಸ ಯೋಜನೆ ಗ್ರಾಮೀಣ ಜನರ ಜೀವನೋಪಾಯವನ್ನು ಬಲಪಡಿಸುವ ಜೊತೆಗೆ ವಿಕಸಿತ ಭಾರತದ ಗುರಿ ಸಾಧನೆಗೆ ಸಹಕಾರಿಯಾಗಲಿದೆ ಎಂದು ಸಮರ್ಥಿಸಿಕೊಂಡರು. ಚರ್ಚೆಯ ಅಂತ್ಯದಲ್ಲಿ ಮತಕ್ಕೆ ಇಡಲಾದ ಮಸೂದೆ, ಪ್ರತಿಪಕ್ಷಗಳ ಪ್ರತಿಭಟನೆಯ ನಡುವೆಯೇ ಅಂಗೀಕಾರಗೊಂಡಿತು.
ಈ ವೇಳೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ, “ಲೋಕಸಭೆಯು ವಿ.ಬಿ–ಜಿ ರಾಮ್ ಜಿ ಮಸೂದೆಯನ್ನು ಅಂಗೀಕರಿಸಿದೆ” ಎಂದು ಘೋಷಿಸಿದರು. ಮಸೂದೆಯನ್ನು ಸ್ಥಾಯಿ ಸಮಿತಿಗೆ ಕಳುಹಿಸಬೇಕೆಂಬ ಪ್ರತಿಪಕ್ಷಗಳ ಒತ್ತಾಯವನ್ನು ಅವರು ತಿರಸ್ಕರಿಸಿದರು. ಮಸೂದೆ ಕುರಿತು ಸಾಕಷ್ಟು ಚರ್ಚೆ ನಡೆದಿದೆ ಎಂದು ಸ್ಪೀಕರ್ ಸ್ಪಷ್ಟಪಡಿಸಿದರು.
ಯೋಜನೆಯ ಹೆಸರಿನಿಂದ ಮಹಾತ್ಮ ಗಾಂಧಿ ಹೆಸರನ್ನು ತೆಗೆದುಹಾಕಿರುವುದನ್ನು ಕಾಂಗ್ರೆಸ್ ಸೇರಿದಂತೆ ಹಲವು ಪ್ರತಿಪಕ್ಷಗಳು ತೀವ್ರವಾಗಿ ವಿರೋಧಿಸಿವೆ. ಇದು ಮಹಾತ್ಮ ಗಾಂಧಿ ಅವರ ಪರಂಪರೆಗೆ ಅವಮಾನ ಎಂದು ಆರೋಪಿಸಿದ ಪ್ರತಿಪಕ್ಷ ಸದಸ್ಯರು, ಸದನದ ಮಧ್ಯೆ ಮಸೂದೆ ಪ್ರತಿಯನ್ನು ಹರಿದು ಹಾಕಿ ಪ್ರತಿಭಟನೆ ನಡೆಸಿದರು.
ಪ್ರತಿಪಕ್ಷಗಳ ಗದ್ದಲ ಹೆಚ್ಚಿದ ಹಿನ್ನೆಲೆಯಲ್ಲಿ, ಸ್ಪೀಕರ್ ಓಂ ಬಿರ್ಲಾ ಅವರು ಲೋಕಸಭೆ ಕಲಾಪವನ್ನು ನಾಳೆಗೆ ಮುಂದೂಡಿದರು. ಶುಕ್ರವಾರ ಚಳಿಗಾಲದ ಅಧಿವೇಶನದ ಕೊನೆಯ ದಿನವಾಗಿದ್ದು, ಈ ಮಸೂದೆ ಮುಂದಿನ ದಿನಗಳಲ್ಲಿ ರಾಜ್ಯಸಭೆಯಲ್ಲಿ ಚರ್ಚೆಗೆ ಬರಲಿದೆ.
